ಲೋಕಸಭಾ ಚುನಾವಣೆ | ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆಗೆ ಕ್ರಮ: ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು
ಹೊಸಪೇಟೆ: ಲೋಕಸಭಾ ಚುನಾವಣೆ-2024 ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ 16ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ 365, ಗ್ರಾಮೀಣ ಪ್ರದೇಶದಲ್ಲಿ 869 ಸೇರಿ ಒಟ್ಟು 1234 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಮತದಾನ ದಿನದಂದು ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಪೊಲೀಸ್ ಭದ್ರತೆಗೆ ಅಗತ್ಯ ಏರ್ಪಾಡು ಮಾಡಲಾಗುವುದು ಎಂದು ತಿಳಿಸಿದರು.
ಹಡಗಲಿ ತಾಲೂಕಿನಲ್ಲಿ 218, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 254, ವಿಜಯನಗರ ತಾಲೂಕಿನಲ್ಲಿ 259, ಕೂಡ್ಲಿಗಿ ತಾಲೂಕಿನಲ್ಲಿ 250, ಹರಪನಹಳ್ಳಿ ತಾಲೂಕಿನಲ್ಲಿ 253 ಸೇರಿ ಒಟ್ಟು 1234 ಮತಗಟ್ಟೆಗಳಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ನಿಸ್ಪಕ್ಷಪಾತವಾಗಿ ಚುನಾವಣೆಯನ್ನು ಜರುಗಿಸುವ ನಿಟ್ಟಿನಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಈ ಚುನಾವಣೆಯಲ್ಲಿ ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಿದ 244 ಮತಗಟ್ಟೆಗಳಲ್ಲಿ ಹೆಚ್ಚಿನ ರೀತಿಯಲ್ಲಿ ಪೊಲೀಸ್ ನಿಗಾ ಇಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ ಉಪಸ್ಥಿತರಿದ್ದರು.