ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ
ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಜಾ ವೆಂಕಟಪ್ಪ ನಾಯಕ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ 20 ದಿನಗಳಿಂದಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಲ್ಕು ಬಾರಿ ಶಾಸಕ: ರಾಜಾ ವೆಂಕಟಪ್ಪ ನಾಯಕ ಅವರು ನಾಲ್ಕು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 1994ರಲ್ಲಿ ಕರ್ನಾಟಕ ಕಾಂಗ್ರೆಸ್ ಪಾರ್ಟಿ(ಕೆಸಿಪಿ)ಯಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದರು. 1999, 2013 ಹಾಗೂ 2023ರಲ್ಲಿ ಕಾಂಗ್ರೆಸ್ ಪಕ್ಷದಿಂದ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
ಸುರಪುರ ಪರಿಶಿಷ್ಟ ಪಂಗಡ(ಎಸ್‍ಟಿ) ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ ಮಣಿಸಿದ್ದರು. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರಿಗೆ ಕೆಲದಿನಗಳ ಹಿಂದೆಯೆಷ್ಟೇ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು, ಅವರು ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.
ಹುಟ್ಟೂರಿನಲ್ಲಿ ಅಂತ್ಯಕ್ರಿಯೆ: ರಾಜಾ ವೆಂಕಟಪ್ಪ ನಾಯಕರ ಅಂತ್ಯ ಸಂಸ್ಕಾರವನ್ನು ನಾಳೆ(ಫೆ.26)ರಂದು ಸಕಲ ಸರಕಾರಿ ಗೌರವದೊಂದಿಗೆ ನೆರವೇರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.