ಯಾದಗಿರಿ | ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ಗಿರಿಜನ ಉಪಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ.
ಯಾದಗಿರಿ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನಕ್ಕೆ ತಕ್ಕಂತೆ ಭೌತಿಕ ಪ್ರಗತಿ ಸಾಧಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಸ್ ಸಿ ಪಿ/ಟಿಎಸ್ ಪಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಮಾರ್ಚ್ವರೆಗೆ ಕಾಯದೇ ಈಗಾಗಲೇ ಮಂಜೂರಾಗಿರುವ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಶೇ. ನೂರರಷ್ಟು ಭೌತಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯ ಪ.ಜಾತಿ, ಪರಿಶಿಷ್ಟ ಪಂಗಡ ಜನಾಂಗಗಳ, ಅಲೆಮಾರಿ ಜನಾಂಗದ ಕಾಲನಿಗಳಿಗೆ ಹಾಗೂ ಗ್ರಾಮಗಳಿಗೆ ವಿದ್ಯುತ್ ಸಂಪರ್ಕವಿಲ್ಲದ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಪ್ರಸ್ತಾವನೆಯನ್ನು ಜೆಸ್ಕಾಂ ಅಧಿಕಾರಿಗಳಿಗೆ ಒಂದು ವಾರದೊಳಗೆ ಸಲ್ಲಿಸಬೇಕು. ಜೆಸ್ಕಾಂ ಅಧಿಕಾರಿಗಳು ವರದಿ ಆಧಾರದ ಆಧ್ಯತೆ ಮೇಲೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನ, ಪ್ರಗತಿ ವರದಿ ಸಲ್ಲಿಸಬೇಕು. ಅನುದಾನ ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳು ಭೌತಿಕವಾಗಿ ಸೂಕ್ತ ಪ್ರಗತಿ ಸಾಧಿಸಬೇಕು. ಭೌತಿಕ ಪ್ರಗತಿಗೆ ಅನುಗುಣವಾಗಿ ಖರ್ಚು ವೆಚ್ಚ ಮಾಡಿ ವರದಿ ಸಲ್ಲಿಸಲು ತಿಳಿಸಿದ ಅವರು, ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ಸಮಾಜ ಕಲ್ಯಾಣಾಧಿಕಾರಿ ಚನ್ನಬಸವ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.